ಸಮಸ್ಯೆಗಳ ಇತ್ಯರ್ಥಕ್ಕೆ ಪ್ರತಿ ಮಾಹೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮನ್ವಯ ಸಭೆ ನಡೆಸಲು ನಿರ್ದೇಶನ : ಡಾ.ವಿಶಾಲ್. ಆರ್
ಹಾವೇರಿ 09: ವಿವಿಧ ಇಲಾಖೆಗಳಲ್ಲಿ ಇರುವ ಸಮಸ್ಯೆಗಳ ಇತ್ಯರ್ಥಕ್ಕೆ, ಪ್ರತಿ ಮಾಹೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮನ್ವಯ ಸಭೆ ಮಾಡುವ ಮೂಲಕ, ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಆರ್ಥಿಕ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು (ವಿತ್ತೀಯ ಸುಧಾರಣೆ) ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ವಿಶಾಲ್. ಆರ್. ಅವರು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಕಂದಾಯ ಇಲಾಖೆ, ಕುಡಿಯುವ ನೀರು, ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಪರೀಶೀಲನೆ ನಡೆಸಿದರು, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನ್ಯಾಯಲಯ ಪ್ರಕರಣ, ಜಮೀನು, ಕಟ್ಟಡ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಆಡಳಿತಕ್ಕೆ ವೇಗ ನೀಡಬೇಕು ಎಂದು ತಿಳಿಸಿದರು.
ಸಮನ್ವಯ ಸಮಿತಿ ಸಭೆಗೆ ಬರುವ ಎಲ್ಲ ಅಧಿಕಾರಿಗಳು ತಮ್ಮ ಇಲಾಖೆಗಳ ಸಮಸ್ಯೆಗಳ ಪಟ್ಟಿಮಾಡಿಕೊಂಡು ಸಭೆಗೆ ಬರುವ ಜೊತೆಗೆ ಯಾವ ಇಲಾಖೆಯಿಂದ ಯಾವ ಕೆಲಸ ಆಗಬೇಕು ಎಂಬುದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಹಾಗೂ ಸಮಸ್ಯೆಗೆ ಪರಿಹಾರಕಂಡುಕೊಂಡು ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂದಿನ ಸಭೆಗೆ ಬರುವಾಗ ತಮ್ಮ ಇಲಾಖೆಗಳ ಸಮಸ್ಯೆ, ಇಲಾಖೆಗಳ ಕೋರ್ಟ್ ಪ್ರಕರಣಗಳಲ್ಲಿ ವಿರುದ್ಧ ಹಾಗೂ ಪರವಾಗಿ ಆದ ಆದೇಶಗಳ ಮಾಹಿತಿಯನ್ನು ಕಡ್ಡಾಯವಾಗಿ ತರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಸಿದ್ಧತೆಮಾಡಿಕೊಳ್ಳಬೇಕು ತಾಕೀತು ಮಾಡಿದರು.
ಜಾನುವಾರುಗಳಿಗೆ ಗೋಶಾಲೆಗೆ ಜಾಗ ಗುರುತಿಸಬೇಕು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಾನುವಾರುಗಳಿಗೆ ಮೇವಿನ ಸಂಗ್ರಹಣೆ ಬಗ್ಗೆ ಗಮನಹರಿಸಬೇಕು ಎಂದು ಪಶು ಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಮಾತನಾಡಿ, ಕುಡಿಯುವ ನೀರಿನ ಬಗ್ಗೆ ಸಮಸ್ಯೆ ಪರಿಹಾರಕ್ಕೆ ಪ್ರತಿ ತಾಲೂಕಿನಲ್ಲಿ ತಹಶೀಲ್ದಾರ ಅಧ್ಯಕ್ಷತೆಯಲ್ಲಿ ವಾರಕ್ಕೊಮ್ಮೆ ಸಭೆ ನಡೆಸಲಾಗುತ್ತಿದೆ. ಭದ್ರಾ ಜಲಾಶಯದಿಂದ ತುಂಬಭದ್ರಾ ನದಿಗೆ ನೀರು ಬಿಡಲಾಗಿದ್ದು, ಜಿಲ್ಲೆಯ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಇರುವುದಿಲ್ಲ. ಜಿಲ್ಲೆಯ 17 ಗ್ರಾಮ ಪಂಚಾಯತಿಗಳ 18 ಗ್ರಾಮಗಳಿಗೆ 21 ಕೊಳವೆಬಾವಿ ಬಾಡಿಗೆ ಪಡೆದು ನೀರು ಪೂರೈಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಪೌರಕಾರ್ಮಿಕರಿಗೆ ಹೆಪಟೈಟಿಸ್ ಇಂಜಕ್ಸೆನ್: ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರಿಗೆ ಕಡ್ಡಾಯವಾಗಿ ಹೆಪಟೈಟಿಸ್-ಬಿ ಮತ್ತು ಸಿ ಇಂಜೆಕ್ಸ್ ಮಾಡಿಸಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಮತ್ತು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು ಹಾಗೂ ಪೌರಕಾರ್ಮಿಕರ ಹೆಪಟೈಟಿಸ್ ಪರೀಕ್ಷೆ ಹಾಗೂ ಹಿಮೋಗ್ಲೋಬಿನ್ ಪರೀಕ್ಷೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಆಸ್ತಿಗಳ ದಾಖಲೆ ಪರೀಶೀಲನೆ ಸೂಚನೆ: ಅಂಗನವಾಡಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ, ಶಾಲಾ ಕಟ್ಟಡಗಳು, ಶಿಕ್ಷಣ ಇಲಾಖೆ ಉಪನಿರ್ದೇಶಕರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲೂಕಾ ಆರೋಗ್ಯ ಕೇಂದ್ರಗಳ ಕಟ್ಟಡಗಳು ಆಯಾ ಇಲಾಖೆ ಮುಖ್ಯಸ್ಥರ ಹೆಸರಿನಲ್ಲಿ ನೋಂದಣಿಯಾಗಿರಬೇಕು. ಈ ಕುರಿತು ಪರೀಶೀಲನೆ ಮಾಡಿ ಮುಂದಿನ ಸಭೆಯಲ್ಲಿ ಮಾಹಿತಿ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ ವಸೂಲಾತಿಗೆ ಆದ್ಯತೆ ನೀಡಿ: ಸ್ಥಳೀಯ ನಗರ ಸಂಸ್ಥೆಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ ಎಷ್ಟು ಕರ ವಸೂಲಾಗಿದೆ ಎಂದು ಸ್ಥಳೀಯ ನಗರ ಸಂಸ್ಥೆಗಳ ಮುಖ್ಯಾಧಿಕಾರಿಗಳನ್ನು ಪಶ್ನಿಸಿದಾಗ, ಸರಿಯಾದ ಮಾಹಿತಿ ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಕರ ವಸೂಲಾತಿಗೆ ಆದ್ಯತೆ ನೀಡಿ ಎಂದು ಸೂಚನೆ ನೀಡಿದರು.
ತಹಶೀಲ್ದಾರ ಹಾಗೂ ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಕೋರ್ಟ್‌ನಲ್ಲಿರುವ ಪ್ರಕರಣಗಳನ್ನು ಆದ್ಯತೆ ಮೇರೆಗೆ ಇತ್ಯರ್ಥಗೊಳಿಸಬೇಕು. ಆರ್.ಟಿ.ಸಿ. ಮ್ಯೂಟೇಷನ್ ಹಾಗೂ ಆರ್.ಟಿ.ಸಿ. ಕರೆಕ್ಸನ್ ತ್ವರಿತವಾಗಿ ಕಾಲಮಿತಿಯೊಳಗೆ ವಿಲೇಗೊಳಿಸುವಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಆರ್‌ಟಿಸಿಗೆ ಆಧಾರ್ ಜೋಡಣೆ ಆದ್ಯತೆ ಮೇರೆಗೆ ನೂರಕ್ಕೆ ನೂರರಷ್ಟು ಆಧಾರ್ ಜೋಡಣೆಗೆ ಕ್ರಮವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಮಾಜಿಕ ಭದ್ರತಾ ಯೋಜನೆ ಮಾಶಾಸನ, ಅನ್ನಭಾಗ್ಯ, ಭಾಗ್ಯಲಕ್ಷ್ಮೀ ಸೇರಿದಂತೆ ವಿವಿಧ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ಮರಣಹೊಂದಿದ ಕುರಿತು ಇ-ಜನ್ಮ ತಂತ್ರಾಂಶದಲ್ಲಿ ದಾಖಲಾಗದ ಪ್ರಕರಣಗಳನ್ನು ಪತ್ತೆ ಹಚ್ಚಿ ಸೌಲಭ್ಯಗಳು ದುರುಪಯೋಗವಾಗದಂತೆ ಸ್ಥಗಿತಗೊಳಿಸಬೇಕು ಎಂದು ತಹಶೀಲ್ದಾರಗಳಿಗೆ ಸೂಚನೆ ನೀಡಿದರು.
ಕೃಷಿ ಇಲಾಖೆ, ಮೀನುಗಾರಿಕೆ, ಲೋಕೋಪಯೋಗಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರೀಶೀಲನೆ ನಡೆಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ, ಜಿ,ಪಂ.ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ವಿವಿಧ ತಾಲೂಕುಗಳ ತಹಶೀಲ್ದಾರಗಳು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.