ಶಿಕ್ಷಣ ಪ್ರತಿ ಮಗುವಿನ ಹಕ್ಕು: ಮುರಳಿ ಮೋಹನ್ ರೆಡ್ಡಿ

Education is every child's right: Murali Mohan Reddy

ಶಿಕ್ಷಣ ಪ್ರತಿ ಮಗುವಿನ ಹಕ್ಕು: ಮುರಳಿ ಮೋಹನ್ ರೆಡ್ಡಿ 

ಬೆಳಗಾವಿ 30:  ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾಯ್ದೆ ಅನುಷ್ಠಾನ ಕುರಿತು ಪ್ಯಾನ ಇಂಡಿಯಾ ಕ್ಯಾಂಪ 2.0 ಕಾನೂನು ಅರಿವು ಕಾರ್ಯಕ್ರಮಕ್ಕೆ ಗುರುವಾರ (ಜ.30) ಚನ್ನಮ್ಮ ವೃತ್ತ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಛೇರಿ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ. ಮುರಳಿ ಮೋಹನ್ ರೆಡ್ಡಿ ಅವರು ಚಾಲನೆ ನೀಡಿದರು.  

ಈ ವೇಳೆ ಮಾತನಾಡಿದ ಅವರು ಶಿಕ್ಷಣ ವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಮಕ್ಕಳನ್ನು ರಾಷ್ಟ್ರದ ಮುಖ್ಯವಾಹಿನಿಗೆ ಕರೆ ತರಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕಾಗಿದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು ಹಾಗೂ ಅದನ್ನು ಪ್ರತಿ ಮಗುವಿಗೆ ದೊರಕಿಸುವುದು ಪ್ರತಿ ನಾಗರೀಕನ ಕರ್ತವ್ಯವಾಗಿರುತ್ತದೆ ಎಂದು ತಿಳಿಸಿದರು.  

ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ಅನ್ವಯ ಎಲ್ಲಾ ಉದ್ಯೋಗಕ್ಕೆ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಿದರು.  

ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಅನ್ವಯ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ಅಂತಹವರಿಗೆ ದಂಡ ಹಾಗೂ ಜೈಲು ಶಿಕ್ಷೆ ವಿಧಿಸಲಾಗುತ್ತದೆ.  

ಇಂತಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ  ಅಥವಾ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಬೇಕು.  

ಈ ಕುರಿತು ಮಕ್ಕಳ ಸಹಾಯವಾಣಿ 1098 ಹಾಗೂ ಕಾರ್ಮಿಕರ ಸಹಾಯವಾಣಿ 155214 ಸಂಖ್ಯೆಗಳಿಗೆ ಸಂಪರ್ಕಿಸಿ ದೂರು ದಾಖಲಿಸಬಹುದು ಎಂದು ಪಿ. ಮುರಳಿ ಮೋಹನ್ ರೆಡ್ಡಿ ಅವರು ಹೇಳಿದರು.  

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರುತಿ.ಎನ್‌. ಎಸ್, ಸಹಾಯಕ ಕಾರ್ಮಿಕ ಆಯುಕ್ತ ದೇವರಾಜ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚಂದ್ರಕಾಂತ ಸುಖಸಾರೆ, ಬಾಲಕಾರ್ಮಿಕ ಯೋಜನಾ ಸಂಸ್ಥೆ ಯೋಜನಾ ನಿರ್ದೇಶಕರಾದ ಜ್ಯೋತಿ ಕಾಂತೆ ಸೇರಿದಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಜರಿದ್ದರು.