ಮೇ. 20ರಂದು ಹೊಸಪೇಟೆಯಲ್ಲಿ ಸರ್ಕಾರದ ಸಾಧನಾ ಸಮಾವೇಶ ಮಾಡಲಾಗುತ್ತಿದೆ - ಸಿ.ಎಂ. ಸಿದ್ದರಾಮಯ್ಯ

Government's resource conference being held in Hospet on May 20 - CM Siddaramaiah

ಮೇ. 20ರಂದು ಹೊಸಪೇಟೆಯಲ್ಲಿ ಸರ್ಕಾರದ ಸಾಧನಾ ಸಮಾವೇಶ ಮಾಡಲಾಗುತ್ತಿದೆ - ಸಿ.ಎಂ. ಸಿದ್ದರಾಮಯ್ಯ 

ಕೊಪ್ಪಳ  16:  20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ರಾಜ್ಯ ಸರ್ಕಾರ  ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೃಹತ್ ಮಟ್ಟದ ಸಾಧನಾ ಸಮಾವೇಶ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹೇಳಿದರು. 

ಅವರು ಶುಕ್ರವಾರ ವಿಜಯನಗರ ಜಿಲ್ಲೆಗೆ ಭೇಟಿಯ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಕೊಪ್ಪಳ ತಾಲೂಕಿನ ಗಿಣಿಗೆರಾ ಏರಸ್ಟ್ರೀಪ್ ಆಗಮಿಸಿ ನಂತರ ಪೋಲಿಸ್ ಗೌರವ ವಂದನೆ ಸ್ವೀಕರಿಸಿದ ನಂತರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು. 

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಸಾಧನೆಗಳನ್ನು ಜನರಿಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಮಟ್ಟದಲ್ಲಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ 3 ಲಕ್ಷ ಜನ ಸೇರಲಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆದ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುವುದು. ಜನಪರವಾದ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಸಮರ​‍್ಕವಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಿಗೆ ಯಾವುದೇ ಹಣದ ಕೊರತೆ ಇರುವುದಿಲ್ಲ. ಇದಕ್ಕಾಗಿ ಬಜೆಟ್‌ನಲ್ಲಿ ಈ ವರ್ಷ ಪ್ರತ್ಯೇಕವಾಗಿ ಹಣವನ್ನು ಮೀಸಲಿಡಲಾಗಿದೆ ಎಂದರು. 

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಸ್ಥಳ ಪರೀಶೀಲನೆಗಾಗಿ ಇಂದು ಆಗಮಿಸಿದ್ದೆನೆ. ಸರ್ಕಾರದ ಸಾಧನಾ ಸಮಾವೇಶದಲ್ಲಿ ಸಂಪುಟದ ಎಲ್ಲಾ ಸಚಿವರು, ಸಂಸದರು, ಶಾಸಕರು ಸೇರಿದಂತೆ ಅನೇಕರು ಪಾಲ್ಗೊಳ್ಳುವುದರ ಜೊತೆಗೆ ವಿಜಯನಗರ ಜಿಲ್ಲೆಯ ಅಕ್ಕ-ಪಕ್ಕದ ಜಿಲ್ಲೆಗಳ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.   

ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್‌.ಕೆ. ಪಾಟೀಲ್, ಕಂದಾಯ ಸಚಿವರಾದ ಕೃಷ್ಣ ಭೈರೆಗೌಡ, ಕರ್ನಾಟಕ ವಿಧಾನ ಪರಿಷತ್ತಿನ ಸಭಾ ನಾಯಕರು ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌.ಭೋಸರಾಜು, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ, ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್‌.ಜಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ, ಬಳ್ಳಾರಿ ಸಂಸದ ಇ.ತುಕಾರಾಂ, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಕಂಪ್ಲಿ ಶಾಸಕರಾದ ಜೆ.ಎನ್‌.ಗಣೇಶ ಮತ್ತು ವಿಜಯನಗರ ಶಾಸಕರಾದ ಹೆಚ್‌.ಆರ್‌.ಗವಿಯಪ್ಪ, ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ ಗುಪ್ತಾ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.