ಕೊಪ್ಪಳ 30: 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಬೇಕಾಗಿದ್ದು, ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತು ಮಂಗಳವಾರದಂದು (ಜುಲೈ.30) ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬರುವ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಕೊಪ್ಪಳ ಜಿಲ್ಲೆಯಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಗುವುದು. ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಬೆಳಿಗ್ಗೆ 08 ಗಂಟೆಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಧ್ವಜಾರೋಹಣ ನೆರವೇರಲಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಲಿದೆ. ಶಾಲಾ ಮಕ್ಕಳು, ಎನ್.ಸಿ.ಸಿ., ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಅಲ್ಲದೆ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಕಾರ್ಯಕ್ರಮಗಳು ನೆರವೇರಲಿವೆ. ಅಂದು ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಗರದ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗುವುದು. ಜಿಲ್ಲಾ ಕ್ರೀಡಾಂಗಣ ಮತ್ತು ಸಾಹಿತ್ಯ ಭವನದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾಂಸ್ಕೃತಿಕ ಸಮಿತಿಯು ಆಯ್ಕೆ ಮಾಡಬೇಕು. ಒಳ್ಳೆಯ ಕಾರ್ಯಕ್ರಮಗಳನ್ನು ಕೊಡುವಂತಾಗಬೇಕು. ಈ ಬಾರಿ ಜಲಾಮೃತ ಮತ್ತು ಜಲಶಕ್ತಿ ಅಭಿಯಾನಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿ ಒತ್ತು ನೀಡಿ. ಈಗಾಗಲೆ ಪ್ಲಾಸ್ಟಿಕ್ ಧ್ವಜಗಳನ್ನು ನಿಷೇಧಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಪ್ಲಾಸ್ಟಿಕ್ ಧ್ವಜವನ್ನು ಮಾರಾಟ ಮಾಡುವುದಾಗಲಿ ಅಥವಾ ಬಳಸುವುದಾಗಲಿ ಮಾಡುವಂತಿಲ್ಲ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಸೂಚಿಸಿದರು.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಾರ್ವಜನಿಕರೂ ಹಾಗೂ ಎಲ್ಲ ಅಧಿಕಾರಿ, ನೌಕರರು ತಪ್ಪದೆ ಭಾಗವಹಿಸಬೇಕು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಪ್ರಮುಖ ಬೀದಿ, ಸರ್ಕಾರದ ಕಚೇರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಕೈಗೊಂಡು ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಬೆಳಿಗ್ಗೆಯೇ ಸಿಹಿ ತಿಂಡಿಯ ಜೊತೆಗೆ ಹಾಲು ವಿತರಣೆ ಮಾಡುವಂತೆ ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಮಕ್ಕಳಿಗೆ ನಗರಸಭೆ ವತಿಯಿಂದ ಬಾಳೆಹಣ್ಣು ವಿತರಿಸಬೇಕು. ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ, ಕ್ರೀಡಾ ಕ್ಷೇತ್ರ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಲು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು. ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಬೇಕು. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಕವಾಯತು ಪೂರ್ವ ಸಿದ್ಧತೆ ಕೈಗೊಳ್ಳುವ ಮಕ್ಕಳಿಗೆ ಕುಡಿಯುವ ನೀರು ಹಾಗೂ ಅಲ್ಪೋಪಹಾರದ ವ್ಯವಸ್ಥೆ ಕೈಗೊಳ್ಳಬೇಕು. ಕಾರ್ಯಕ್ರಮದ ಅಚ್ಚುಕಟ್ಟು ನಿರ್ವಹಣೆಗಾಗಿ ವೇದಿಕೆ ಸಮಿತಿ, ಸಾಂಸ್ಕೃತಿಕ ಸಮಿತಿ ರಚಿಸಿದ್ದು, ಆಯಾ ಸಮಿತಿಗೆ ವಹಿಸಿದ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ನಗರದ ಎಲ್ಲ ಶಾಲೆ ಕಾಲೇಜಿನ ಮಕ್ಕಳು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು. ಮಕ್ಕಳಿಗೆ ಕ್ರೀಡಾಂಗಣಕ್ಕೆ ಕರೆದುಕೊಂಡು ಹೋಗಲು ನಗರ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಬೇಕು ಮತ್ತು ಕೊಪ್ಪಳ ನಗರದ ರಸ್ತೆಗಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯದಾ ಅಯಿಷಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇ ಶಕ ಆರ್.ಜಿ. ನಾಡಗೀರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಅಮಿತಾ ಯರಗೋಳ್ಕರ್, ನಗರ ಪೊಲೀಸ್ ಠಾಣೆಯ ಪಿ.ಐ. ಶಿವಾನಂದ ವಾಲಿಕಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.