ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ- ನಡಿಗೆ ಜಾಥಾಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
ಹಾವೇರಿ 05: ರಾಷ್ಟ್ರೀಯ ಸುರಕ್ಷತೆ ಸಂಪ್ತಾಹ ಅಂಗವಾಗಿ ಆಯೋಜಿಸಲಾದ ನಡಿಗೆ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ನಗರದ ಜಿಲ್ಲಾ ಗುರುಭವನ ಮುಂಭಾಗದಲ್ಲಿ ಬುಧವಾರ ಜಿಲ್ಲಾಡಳಿತ, ಪೊಲೀಸ್, ಸಾರಿಗೆ, ಶಿಕ್ಷಣ, ಆರೋಗ್ಯ ಇಲಾಖೆ, ಕರ್ನಾಟಕ ರಾಜ್ಯ ಮೀಸಲು ಪಡೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಸ್ಕೌಟ್ಸ್ ಆಂಡ್ ಗೈಡ್ಸ್, ಭಾರತ ಸೇವಾದಳ, ಪ್ಯಾರಾಮೆಡಿಕಲ್, ನರ್ಸಿಂಗ್ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾದ ನಡಿಗೆ ಜಾಥಾಕ್ಕೆ(ವಾಕ್‌ಥಾನ್) ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು.
ನಡಿಗೆ ಜಾಥಾದಲ್ಲಿ ರಸ್ತೆ ಸುರಕ್ಷತೆ ಘೋಷವಾಕ್ಯ ಹಾಗೂ ಕರಪತ್ರಗಳನ್ನು ಹಂಚುವ ಮೂಲಕ ರಸ್ತೆ ಸುರಕ್ಷತೆ ನಿಯಮಗಳ ಮೂಲಕ ಜಾಗೃತಿ ಮೂಡಿಸಲಾಯಿತು.
ನಗರದ ಪ್ರಮುಖ ಬೀದಿಗಳಲ್ಲಿ ನಡಿಗೆ ಜಾಥಾ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ತೆರಳಿ ಅಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ರಸ್ತೆ ಸುರಕ್ಷತೆ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ನಡಿಗೆ ಜಾಥಾ ಪ್ರವಾಸಿ ಮಂದಿರದವರೆಗೆ ಸಾಗಿ ಮುಕ್ತಾಯಗೊಂಡಿತು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಕು.ವಿನಯಾ ಕಾಟೋಕರ, ನಗರ ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ಎನ್.ಆರ್.ಕಾಟೆ, ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಜಾಥಾದಲ್ಲಿ ಭಾಗವಹಿಸಿದ್ದರು.