ನವ ಭಾರತ’ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು-ಕೇಂದ್ರ ಸಚಿವ ರಮೇಶ್ ಪೊಖ್ರಿಯಾಲ್

Ramesh Pokhriyal,

‘ಶಿಮ್ಲಾ, ನ 29- ನವಭಾರತ ನಿರ್ಮಾಣದ ಮುನ್ನೋಟದಲ್ಲಿ ದೇಶದ ಯುವಕರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಅವರು, ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ ಐದು ಟ್ರಿಲಿಯನ್ ಆರ್ಥಿಕತೆಯಾಗಲು ವಿದ್ಯಾರ್ಥಿಗಳು ಅಧ್ಯಯನದಲ್ಲಿ ಸಮರ್ಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. 

ಶುಕ್ರವಾರ ಹಿಮಾಚಲ ಪ್ರದೇಶ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಜ್ಞಾನ ಮತ್ತು ಬುದ್ದಿವಂತಿಕೆಯಲ್ಲಿ ಶತಮಾನಗಳಿಂದಲೂ ವಿಶ್ವಮಟ್ಟದಲ್ಲಿ ಭಾರತ ‘ವಿಶ್ವಗುರು’ ಎಂಬ ಖ್ಯಾತಿಗೆ ಪಾತ್ರವಾಗಿದೆ. ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಟಾರ್ಟ್ ಅಪ್ ಮುಂತಾದ ಕಾರ್ಯಕ್ರಮಗಳ ಆರಂಭದಿಂದ ದೇಶಾದ್ಯಂತ ಅಪಾರ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದು, ಸ್ವಯಂ ಉದ್ಯೋಗ ಅವಕಾಶಗಳು ಹೆಚ್ಚಾಗುತ್ತಿವೆ. ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದ್ದು, ಉದ್ಯೋಗ ಆಧರಿತ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ ಎಂದು ಹೇಳಿದರು. 

ರಾಜ್ಯಪಾಲ ಬಂಡಾರು ದತ್ತಾತ್ರೇಯ ಮಾತನಾಡಿ, ಜ್ಞಾನ ವೃದ್ಧಿಸಿಕೊಳ್ಳುವುದರ ಜೊತೆಗೆ ಒಳ್ಳೆಯ ಗುಣ ಬೆಳೆಸಿಕೊಳ್ಳುವುದು ಶಿಕ್ಷಣದ ಗುರಿಯಾಗಿದೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಜೊತೆಗೆ ಕೌಶಲ್ಯಗಳನ್ನೂ ಬೆಳೆಸಿಕೊಳ್ಳಬೇಕು. ಇದು ಉದ್ಯೋಗ ಪಡೆಯಲು ನೆರವಾಗುತ್ತದೆ. ಇಂದು ಹೆಣ್ಣು ಮಕ್ಕಳು ಎಲ್ಲ ವಲಯಗಳಲ್ಲಿ ಮುಂದೆ ಬರುತ್ತಿದ್ದಾರೆ. ಅನೇಕ ಶೈಕ್ಷಣಿಕ ಸಂಸ್ಥೆಗಳಲ್ಲಿ ಪದಕ ಪಡೆಯುವಲ್ಲಿ ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರ ಸಂಖ್ಯೆಯೇ ಹೆಚ್ಚು. ಸಮಾಜ ಬದಲಾಗುತ್ತಿರುವುದಕ್ಕೆ ಇದು ಸಕಾರಾತ್ಮಕ ಸೂಚನೆಯಾಗಿದೆ ಎಂದು ಹೇಳಿದ್ದಾರೆ.