ಲೋಕದರ್ಶನ ವರದಿ
ಬಳ್ಳಾರಿ 29: ಸ್ವಚ್ಛತೆ ನಿತ್ಯ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ವೈಯಕ್ತಿಕ ಸ್ವಚ್ಛತೆಯ ಜೊತೆಗೆ ಪರಿಸರದ ಸ್ವಚ್ಛತೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಸ್ವಚ್ಛತೆಯನ್ನು ಪ್ರೀತಿಯಿಂದ ಕೈಗೊಳ್ಳಬೇಕು ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಸ.ಚಿ ರಮೇಶ ಅಭಿಪ್ರಾಯಪಟ್ಟರು.
ಕನ್ನಡ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇಂದು ವಿಶ್ವವಿದ್ಯಾಲಯ ಆವರಣದಲ್ಲಿನ ನುಡಿ ಕಟ್ಟಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರ ವಸತಿ ನಿಲಯ ಮತ್ತು ಎಸ್.ಸಿ/ಎಸ್.ಟಿ ವಿದ್ಯಾರ್ಥಿನಿಯರ ವಸತಿ ನಿಲಯಗಳನ್ನು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಚಾಲಕರಾದ ಡಾ. ಅಮರೇಶ ಯತಗಲ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸ್ವಚ್ಛಗೊಳಿಸಿದರು.
ಈ ಸಂದರ್ಭದಲ್ಲಿ ತೋಟಗಾರಿಕಾ ವಿಭಾಗದ ಸಹಾಯಕ ಕುಲಸಚಿವರಾದ ಎಂ.ಎಂ. ಶಿವಪ್ರಕಾಶ, ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕರಾದ ಲೋಕೇಶ್ ಎಸ್.ಕೆ, ದೃಶ್ಯಕಲಾ ವಿಭಾಗದ ಡಾ. ಕೃಷ್ಣೇಗೌಡ ಮತ್ತಿತರರು ಉಪಸ್ಥಿತರಿದ್ದರು.