ಶಿಗ್ಗಾವಿ 22 : ಹಾವೇರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ಹಾವೇರಿ ಜಿಲ್ಲಾ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರದ ಮಾಲಿಕರ ಸಂಘದವರು, ಹಾವೇರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದುಗೊಳಿಸುವಂತೆ ಮನವಿ ಮಾಡಿಕೊಂಡಿರುತ್ತಾರೆ. ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳ ಆವರಣಗಳಲ್ಲಿ ಸ್ಥಗಿತಗೊಂಡರೆ ಸಾಮಾನ್ಯ ಬಡ ಜನರಿಗೆ ಉತ್ತಮ ಗುಣಮಟ್ಟದ ಜನರಿಕ್ ಓಷಧಿಗಳನ್ನು ಕಡಿಮೆ ಹಾಗೂ ಕೈಗೆಟುಕುವ ದರಗಳಲ್ಲಿ ದೊರಕಿಸುವ ಕೇಂದ್ರ ಸರ್ಕಾರದ ಉದ್ದೇಶಕ್ಕೆ ಅಡ್ಡಿಪಡಿಸಿದಂತಾಗುತ್ತದೆ. ಆದುದ್ದರಿಂದ, ಸದರಿ ವಿಷಯದ ಬಗ್ಗೆ ಪರೀಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಬೇಕೆಂದು ಕೋರಿದ್ದಾರೆ.