ವಿಜಯಪುರ 29: ಮುಖ್ಯಮಂತ್ರಿಗಳ ತಾತ್ಕಾಲಿಕ ಪ್ರವಾಸದಂತೆ ಮೇ ತಿಂಗಳ ಕೊನೆಯ ವಾರದಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಲಿದ್ದು ಮುಖ್ಯಮಂತ್ರಿಗಳ ಪ್ರವಾಸದ ಹಿನ್ನಲೆಯಲ್ಲಿ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳು, ವಿವಿಧ ಕಟ್ಟಡಗಳ ಉದ್ಘಾಟನೆ, ಸೇರಿದಂತೆ ದೀರ್ಘಾವಧಿ ಬಾಕಿ ಪ್ರಸ್ತಾವನೆಗಳ ಮಾಹಿತಿ ಸಲ್ಲಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲೋಕೋಪಯೋಗಿ, ಪ್ರವಾಸೋದ್ಯಮ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹೆಸ್ಕಾಂ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಡಿ ನಡೆಯುತ್ತಿರುವ ಕಾಮಗಾರಿಗಳು, ಪ್ರಗತಿಯಲ್ಲಿರುವ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
2024 ಹಾಗೂ 2025ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಎಬಿಸಿ ಮತ್ತು ಡಿ ವೃಂದದ ಅಧಿಕಾರಿ-ನೌಕರರಿಗೆ ಆಯ್ಕೆ ಮಾಡಬೇಕಾದ ಹಿನ್ನಲೆಯಲ್ಲಿ ತಮ್ಮ ಇಲಾಖೆಯಲ್ಲಿ ಸರ್ಕಾರದ ಕಾರ್ಯನಿರ್ವಹಣೆ ತರುವ ಮೂಲಕ ನಾಗರಿಕರಿಗೆ ಗುಣಮಟ್ಟ ಸೇವೆ ನೀಡಿದ, ಅಧಿಕಾರಿ-ನೌಕರರ ಹೆಸರುಗಳನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಒದಗಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಕಚೇರಿ, ಅಂಗನವಾಡಿ, ವಿವಿಧ ವಸತಿ ನಿಲಯಗಳ ಕಟ್ಟಡಕ್ಕಾಗಿ ಅವಶ್ಯಕತೆ ಇರುವ ನಿವೇಶನ ಮಂಜೂರಾತಿಗೆ ಬೇಡಿಕೆ ಸಲ್ಲಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದು, ಬೇಡಿಕೆ ಸಲ್ಲಿಸುವಾಗ ನಿಗದಿತ ಸರ್ವೇ ನಂಬರ್, ಗ್ರಾಮ ಮಾಹಿತಿ ಸೇರಿದಂತೆ ನಿಖರವಾಗಿ ಪ್ರಸ್ತಾವನೆ ಸಲ್ಲಿಸಬೇಕು. ಈಗಾಗಲೇ ಬೇಡಿಕೆ ಸಲ್ಲಿಸಿದ ಇಲಾಖೆಗಳ ಪ್ರಸ್ತಾವನೆಯನ್ನು ಸಂಬಂಧಿಸಿದ ತಹಶೀಲ್ದಾರಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರೀಶೀಲನೆ ನಡೆಸಿ, ವರದಿ ನೀಡುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ವಿವಿಧ ಕಚೇರಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ನಿಟ್ಟಿನಲ್ಲಿ ಆವರಣದಲ್ಲಿರುವ ಹಳೆಯ ನಿರುಪಯುಕ್ತ ವಾಹನಗಳನ್ನು ನಿಯಮಾನುಸಾರ ವಿಲೇವಾರಿಗೆ ಅಗತ್ಯ ಕ್ರಮ ವಹಿಸಬೇಕು. ಈ ಕುರಿತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಾಹನಗಳ ಸೂಕ್ತ ಪರೀಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ವಿಜಯಪುರ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೆಡಶ್ಯಾಳ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.