ಬೆಳಗಾವಿ 04: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರೂ ಜಾನಪದ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟಿ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯದಲ್ಲಿ 8 ಮತ್ತು 9ನೇ ವಾರ್ಷಿಕ ಘಟಿಕೋತ್ಸವದಲ್ಲಿ ಹೊನಕಟ್ಟಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ಮುಖ್ಯ ಅತಿಥಿಗಳಾಗಿ ಆಂಧ್ರ್ರದೇಶದ ವಿಜಯನಗರಂ ಕೇಂದ್ರಿಯ ಬುಡಕಟ್ಟು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ಟಿ.ವಿ ಕಟ್ಟೀಮನಿ ಆಗಮಿಸಿದ್ದರು. ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ ಸುಧಾಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕುಲಪತಿ ಪ್ರೊ. ಟಿ. ಎಂ ಭಾಸ್ಕರ್ ವರದಿ ವಾಚನ ಮಾಡಿದರು.
ಜ್ಯೋತಿರ್ಲಿಂಗ ಹೊನಕಟ್ಟಿ ಅವರು ಕಳೆದ 30 ವರ್ಷಗಳಿಂದ ಜಾನಪದ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರ ಸೇವೆಗೆ ಪೂರಕವಾಗಿ ಮಾತೃಭೂಮಿ ಜನಪದ ಪ್ರಶಸ್ತಿ, ಜನಪದ ಸಿರಿ ಪ್ರಶಸ್ತಿ, ಭಾರತೀಯ ಸಂಸ್ಕೃತಿ ಸಂಗಮ ಪ್ರಶಸ್ತಿ, ನವರಸಪುರ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಪುರಸ್ಕಾರಗಳು ದೊರೆತಿವೆ.