ಉಚಿತ ಆರೋಗ್ಯ ಶಿಬಿರದ ಸದುಪಯೋಗಕ್ಕೆ ಡಾ.ಪ್ರಭುಗೌಡ ಮನವಿ
ತಾಳಿಕೋಟಿ 25: ತಾಲೂಕಿನ ಚಬನೂರ ಗ್ರಾಮದ ಅಮೋಘಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಬಿಎಲ್ಡಿಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಬೃಹತ್ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ ಮೇ 27ರಂದು ನಡೆಯಲಿದ್ದು ಗ್ರಾಮೀಣ ಭಾಗದ ಜನರು ಇದರ ಸದುಪಯೋಗವನ್ನು ಮಾಡಿಕೊಳ್ಳಬೇಕು ಎಂದು ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ಮನವಿ ಮಾಡಿಕೊಂಡಿದ್ದಾರೆ.
ಶಿಬಿರದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಮ್ಮ ನಡೆ ಆರೋಗ್ಯದ ಕಡೆ ಸದೃಢ ದೇಹ ಸಮೃದ್ಧ ಸಮಾಜ ಎಂಬ ಮೂಲ ಧ್ಯೇಯದ ಅಡಿಗೆಯಲ್ಲಿ ನಡೆಲಿರುವ ಈ ಶಿಬಿರವು ಮೇ 27ರಂದು ಮುಂಜಾನೆ 9 ಘಂಟೆಯಿಂದ ಸಂಜೆ 4ರವರೆಗೆ ಚಬನೂರ ಗ್ರಾಮದ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇರುವದು, ಇದರಲ್ಲಿ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ತಜ್ಞ ವೈದ್ಯರು ಸರ್ವ ರೋಗಗಳ ತಪಾಸಣೆ ನಡೆಸುವರು ಹಾಗೂ ನನ್ನ ನೇತೃತ್ವದಲ್ಲಿ ಅನುಗ್ರಹ ಆಸ್ಪತ್ರೆಯ ಸಿಬ್ಬಂದಿಗಳು ಕಣ್ಣಿಗೆ ಸಂಬಂಧಿಸಿದ ರೋಗಗಳ ಕುರಿತು ತಪಾಸನೆ ನಡೆಸಿ ಕಣ್ಣಿನ ಶಸ್ತ್ರಚಿಕಿತ್ಸೆ ಅಗತ್ಯವಿದ್ದವರಿಗೆ ಆಯ್ಕೆ ಮಾಡುವರು. ನಂತರ ಅವರಿಗೆ ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಇದರ ಸದುಪಯೋಗವನ್ನು ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.