ನವದೆಹಲಿ, ಫೆ 5, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ‘ತೀರ್ಥ ಕ್ಷೇತ್ರ ಟ್ರಸ್ಟ್’ ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಪ್ರಧಾನಿ ನರೇಂದ್ರಮೋದಿ ಲೋಕಸಭೆಯಲ್ಲಿ ಬುಧವಾರ ತಿಳಿಸಿದ್ದಾರೆ. ‘ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ರಚಿಸಲಾಗುವುದು. ಇದು ಭಾರತದ ಗೌರವಾನ್ವಿತ ಸುಪ್ರೀಂಕೋರ್ಟ್ ತೀರ್ಪಿಗೆ ಅನುಗುಣವಾಗಿ ರಚನೆಯಾಗಬೇಕಿದ್ದ ಟ್ರಸ್ಟ್ ಆಗಿದೆ. ರಾಮಜನ್ಮಭೂಮಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂಬ ವಿಷಯವನ್ನು ದೇಶವಾಸಿಗಳೊಂದಿಗೆ ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ.’ ಎಂದು ಮೋದಿ ಹೇಳಿದರು.ಟ್ರಸ್ಟ್ ರಚನೆಯ ಕುರಿತು ಬುಧವಾರ ಬೆಳಿಗ್ಗೆ ನಡೆದ ಸಭೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
‘ಟ್ರಸ್ಟ್ ಭಾರತದ ಗೌರವಾನ್ವಿತ ಸುಪ್ರೀಂಕೋರ್ಟ್ ತೀರ್ಪಿಗೆ ಅನುಗುಣವಾಗಿರುತ್ತದೆ. ಮಂದಿರ ನಿರ್ಮಾಣ ಸ್ಥಳದ ಸ್ವಲ್ಪ ಜಾಗವನ್ನು ಸುನ್ನಿ ವಕ್ಫ್ ಮಂಡಳಿಗೆ ಹಂಚಿಕೆ ಮಾಡಲು ಸಹ ತೀರ್ಮಾನಿಸಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ರಾಜ್ಯ ಸರ್ಕಾರ ಈ ಮನವಿಯನ್ನು ಗೌರವಿಸಿ ಒಪ್ಪಿದೆ.’ ಎಂದು ಪ್ರಧಾನಿ ಹೇಳಿದರು.ಪ್ರಧಾನಿ ಹೇಳಿಕೆ ನೀಡುತ್ತಿದ್ದಂತೆ, ಆಡಳಿತ ಪಕ್ಷದ ಸದಸ್ಯರು ಮೇಜುಕುಟ್ಟಿ ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುತ್ತಾ ಹರ್ಷೋದ್ಘಾರ ಮಾಡಿದರು.