ಕಾಯಕ ಶರಣರ ಆದರ್ಶ ಜೀವನ ಮಾದರಿ: ಮುಂಡರಗಿ ನಾಗರಾಜ

Jayanti of Madara Chennaiah, Dohara Kakkaiah, Samagara Haralaiah, Madara Dulaiah, Urilinga Peddi who

ಬಳ್ಳಾರಿ 10: ಕಾಯಕ ಶರಣರ ವಚನಗಳು ಇಂದಿನ ಆಧುನಿಕ ಯುಗಕ್ಕೂ ಪ್ರಸ್ತುತವಾಗಿದ್ದು, ಇಂದಿನ ಯುವ ಪೀಳಿಗೆಯು ಅವರ ಆದರ್ಶಗಳನ್ನು ಪಾಲಿಸಿ ಮುನ್ನಡೆಯಬೇಕಿದೆ ಎಂದು ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ  ಅವರು ಹೇಳಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮದಿರದ ವೇದಿಕೆ ಸಭಾಂಗಣದಲ್ಲಿ ಸೋಮವಾರ ಏರಿ​‍್ಡಸಿದ್ದ ಕಾಯಕ ಶರಣರಾದ ಮಾದಾರ ಚೆನ್ನಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಮಾದಾರ ದೂಳಯ್ಯ, ಉರಿಲಿಂಗ ಪೆದ್ದಿ ಅವರ ಜಯಂತಿ ಕಾರ್ಯಕ್ರಮವನ್ನು ಕಾಯಕ ಶರಣರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. 

12 ನೇ ಶತಮಾನದಲ್ಲಿನ ಶಿವಶರಣರು, ಯಾವುದೇ ಕಾಯಕವೂ ಮೇಲಲ್ಲ ಮತ್ತು ಕೀಳಲ್ಲ ಎಂಬ ಮನೋಧೋರಣೆಯಿಂದ ಕಾಯಕ ಮಾಡಿ ದೇವರನ್ನು ಒಲಿಸಿಕೊಂಡ ಶರಣರು ಇವರು ಎಂದು ತಿಳಿಸಿದರು. 

ಬಸವಣ್ಣನವರ ಅನುಭವ ಮಂಟಪದಲ್ಲಿ ಎಲ್ಲ ವರ್ಗದ ಶರಣರಿದ್ದರು. ಅವರಲ್ಲಿ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಉರಿಲಿಂಗಿಪೆದ್ದಿ ಎಂಬ ಐವರು ಕಾಯಕ ಶರಣರು ಪ್ರಮುಖ ಹಿರಿಯ ಶರಣರಾಗಿದ್ದರು ಎಂದರು. 

ವಿವಿಧ ಜಿಲ್ಲೆಗಳಲ್ಲಿ ಈ ಕಾಯಕ ಶರಣರ ಮಠಗಳು ಇಂದಿಗೂ ಇವೆ. ಅವರ ಜೀವನ ಹಾಗೂ ಮೌಲ್ಯಗಳನ್ನು ಸಮಾಜಕ್ಕೆ ಬಿತ್ತರಿಸುವ ನಿಟ್ಟಿನಲ್ಲಿ ಸರ್ಕಾರ ಜಯಂತಿ ಆಚರಣೆ ಮಾಡುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡುವುದನ್ನು ಕಡಿಮೆ ಮಾಡಿ ಓದಿನ ಕಡೆ ಗಮನ ಕೊಡಬೇಕು. ಪುಸ್ತಕಗಳನ್ನು ಹೆಚ್ಚು ಹೆಚ್ಚು ಅಧ್ಯಯನ ಮಾಡಬೇಕು ಎಂದರು. 

ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಸಂಗನಕಲ್ಲಿನ ನಿವೃತ್ತ ಪ್ರಾಧ್ಯಾಪಕರಾದ ಶ್ರೀನಿವಾಸಮೂರ್ತಿ ಅವರು ಸಂವಿಧಾನದ ಪೀಠಿಕೆ ಪ್ರತಿಜ್ಞೆ ಭೋದಿಸಿ ಮಾತನಾಡಿ, 12ನೇ ಶತಮಾನದಲ್ಲಿ ವಚನಗಳು ಮತ್ತು ಬುದ್ದನ ಕಾಲದಲ್ಲಿ ತ್ರಿಪಿಟಕಗಳೇ ಸಂವಿಧಾನವಾಗಿತ್ತು ಎಂದರು. 

ಕಾಯಕ ಶರಣರು ತಮ್ಮ ವಚನಗಳ ಮೂಲಕ ಸಮಾಜದಲ್ಲಿರುವ ಕಂದಾಚಾರ, ಜಾತಿ ಪದ್ಧತಿಗಳನ್ನು ಹೋಗಲಾಡಿಸುತ್ತಿದ್ದರು. ಸಮ ಸಮಾಜ ನಿರ್ಮಾಣಕ್ಕಾಗಿ ಶರಣರ ವಚನಗಳನ್ನು ಅಧ್ಯಯನ ಮಾಡುವುದು ಈ ಸಂದರ್ಭದಲ್ಲಿ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. 

ಮತ್ತೋರ್ವ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರಾದ ಶಾಮಣ್ಣ ಅವರು ಮಾತನಾಡಿ, 12ನೇ ಶತಮಾನದಲ್ಲಿದ್ದ ಶರಣರು ಸಮಾಜದಲ್ಲಿದ್ದ ಅಂಕುಡೊಂಕುಗಳ ಕುರಿತು ಸರಳ ಭಾಷೆಯ ಮೂಲಕ ಸಾಮಾನ್ಯ ಜನರಿಗೆ ತಿಳಿಸುವ ಕಾರ್ಯ ಮಾಡುತ್ತಿದರು ಎಂದು ತಿಳಿಸಿದರು. 

ನಾವೀಗ ಸದೃಢ ಭಾರತ ಕಟ್ಟಬೇಕಿದೆ. ಭಾರತ ಸಂವಿಧಾನ ಮಹತ್ತರವಾದದ್ದು,  ಸಮ ಸಮಾಜ ನಿರ್ಮಾಣಕ್ಕಾಗಿ ಶರಣರ ವಚನಗಳನ್ನು ಈಗಿನ ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು. ಆಗ ಮಾತ್ರ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ಸಿರುಗುಪ್ಪದ ದಳವಾಯಿ ಅಂಬಣ್ಣ ಅವರ ಸಂಗಡಿಗರಿಂದ ಶರಣರ ವಚನ ಗಾಯನಗಳನ್ನು ಪ್ರಸ್ತುತ ಪಡಿಸಿದರು. 

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ನಾಗರಾಜ್, ಹಿರಿಯ ಸಾಹಿತಿ ಎನ್‌.ಡಿ.ವೆಂಕಮ್ಮ ಸೇರಿದಂತೆ ಇಲಾಖೆಯ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಇತರರು ಉಪಸ್ಥಿತರಿದ್ದರು.