ಅಗತ್ಯ ಕ್ರಮಕೈಗೊಳ್ಳಲು ಸಚಿವ ಶಿವರಾಜ ತಂಗಡಗಿ ಸೂಚನೆ

Minister Shivaraj Thangadgi instructed to take necessary action

20ರಂದು ಸರ್ಕಾರದ ಸಾಧನಾ ಸಮಾವೇಶ:  

ಅಗತ್ಯ ಕ್ರಮಕೈಗೊಳ್ಳಲು ಸಚಿವ ಶಿವರಾಜ ತಂಗಡಗಿ ಸೂಚನೆ 

ಕೊಪ್ಪಳ 15: ರಾಜ್ಯ ಸರ್ಕಾರವು ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶಕ್ಕೆ ಕೊಪ್ಪಳ ಜಿಲ್ಲೆಯ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆದೊಯ್ಯಲು ಅಗತ್ಯ ಕ್ರಮ ವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಹೇಳಿದರು.  

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಕರೆದ ವಿಜಯನಗರ ಜಿಲ್ಲೆಯಲ್ಲಿ ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.    

ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆಯಲ್ಲಿ ನಡೆಯುವ ಸಾಧನಾ ಸಮಾವೇಶದಲ್ಲಿ ಕಂದಾಯ ಗ್ರಾಮಗಳು, ಜಂಪ್ ಸರ್ವೇ, ಪೊಡಿ ಮುಕ್ತ ಗ್ರಾಮಗಳ ಸೇರಿದಂತೆ ಇತರೆ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರಗಳ ವಿತರಣೆ ಮಾಡಲಿದ್ದು, ಈ ಕಾರ್ಯಕ್ರಮಕ್ಕಾಗಿ ಕೊಪ್ಪಳ ಜಿಲ್ಲೆಯ ವಿವಿಧ ತಾಲ್ಲೂಕಿನ ಫಲಾನುಭವಿಗಳನ್ನು ಕರೆದೊಯ್ಯಲು ಸುಸಜ್ಜಿತವಾದ ಬಸ್‌ಗಳ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು ಹಾಗೂ ಫಲಾನುಭವಿಗಳಿಗೆ ಬೆಳಗಿನ ಉಪಹಾರ, ಕುಡಿಯುವ ನೀರು ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಗೆ ಯಾವುದೇ ರೀತಿಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮದ ನಂತರ ಫಲಾನುಭವಿಗಳನ್ನು ಅವರ ಮೂಲ ಸ್ಥಾನಗಳಿಗೆ ಸುರಕ್ಷಿತವಾಗಿ ತಲುಪಿಸುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ತೀವ್ರ ನಿಗವಹಿಸಬೇಕು. ಇದಕ್ಕಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಮಾತನಾಡಿ, ವಿಜಯನಗರ ಜಿಲ್ಲೆಯಲ್ಲಿ ಜರುಗಲಿರುವ ಸರ್ಕಾರದ ಸಾಧನಾ ಸಮಾವೇಶಕ್ಕಾಗಿ ಕೊಪ್ಪಳ ಜಿಲ್ಲೆಯಿಂದ 18,270 ಫಲಾನುಭವಿಗಳನ್ನು ಕರೆದೊಯ್ಯುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ 250 ಮತ್ತು ಶಾಲಾ ವಾಹನಳು ಒಳಗೊಂಡಂತೆ 125 ಖಾಸಗಿ ಬಸ್‌ಗಳು ಸೇರಿ ಒಟ್ಟು 375 ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ ಮತ್ತು ಈಗಾಗಲೇ ಈ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಗಳನ್ನು ಮಾಡಿ, ಅವರಿಗೆ ಮಾಹಿತಿ ನೀಡಲಾಗಿದೆ ಎಂದರು.  

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್‌.ರುದ್ರೇಶಪ್ಪ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳ ತಹಶೀಲ್ದಾರರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.  

ಪತ್ರಿಕಾಗೋಷ್ಠ್ಠಿ: ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು,  ಸರ್ಕಾರದ ಸಾಧನಾ ಸಮಾವೇಶದಲ್ಲಿ 1 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸುವ ಮೂಲಕ ಸಮರಾ​‍್ಣ ಸಮಾವೇಶವನ್ನು ಹೊಸಪೇಟೆಯಲ್ಲಿ ಮಾಡಲಾಗುತ್ತಿದೆ. ಕಂದಾಯ ಇಲಾಖೆಯಿಂದ ನಡೆಯುತ್ತಿರುವ ಈ ಕಾರ್ಯಕ್ರಮವು ನಮ್ಮ ರಾಜ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಲಾಗುತ್ತಿದೆ. ಈ ಹಿಂದೆ ಕೇವಲ ಕಂದಾಯ ಗ್ರಾಮಗಳೆಂದು ಘೋಷಣೆಯಾಗಿ ಉಳಿದಿದ್ದ ಗ್ರಾಮಗಳನ್ನು ನಮ್ಮ ಸರ್ಕಾರವು ಪೋಡಿಮುಕ್ತ ಗ್ರಾಮಗಳನ್ನಾಗಿ ಮಾಡಿ, ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಮೂಲಕ ಮಹತ್ತರವಾದ ಸಾಧನೆಯನ್ನು ಮಾಡಿದೆ. ಇದರ ಜೊತೆಗೆ ಇ-ಸ್ವತ್ತಿನ ಮೂಲಕ ನೋಂದಣಿ ಮಾಡಿಸಿದೆ. ಸ್ವ ಆಸ್ತಿ ಹಕ್ಕು ಹೊಂದದೆ ಬಧುಕುತ್ತಿರುವ ಕುಟುಂಬಗಳಿಗೆ ಹಕ್ಕು ನೀಡುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ. ವಿಶೇಷವಾಗಿ ಕೊಪ್ಪಳ ಜಿಲ್ಲೆಯಲ್ಲಿ ಕೈಗೊಂಡಿರುವ ಜಂಪ್ ಸರ್ವೇಯಡಿ 3200 ಫಲಾನುಭವಿಗಳಿಗೆ ಇದೇ ಸಮಾರಂಭದಲ್ಲಿ ಹಕ್ಕು ಪತ್ರಗಳ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು.