ನವದೆಹಲಿ, ಜ 22: ಮುಂದಿನ ತಿಂಗಳ 8ರಂದು ನಡೆಯುವ ದೆಹಲಿ ವಿಧಾನಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಗುರುದಾಸ್‌ಪುರ ಸಂಸದರಾದ ಸನ್ನಿ ಡಿಯೋಲ್, ಮತ್ತು ಮಥುರಾ ಸಂಸದೆ ಹೇಮಾ ಮಾಲಿನಿ ಸೇರಿದಂತೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿದೆ.
ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಪಕ್ಷದ ಸ್ಟಾರ್ ಪ್ರಚಾರಕರಾದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ಮಾಜಿ ಕ್ರಿಕೆಟಿಗ ಮತ್ತು ಸಂಸದ ಗೌತಮ್ ಗಂಭೀರ್, ಹನ್ಸ್ ರಾಜ್ ಹನ್ಸ್, ದಿನೇಶ್ ಲಾಲ್ ಯಾದವ್ 'ನಿರಹುವಾ', ರವಿ ಕಿಶನ್, ಸ್ಮೃತಿ ಇರಾನಿ ಅವರ ಹೆಸರಿದೆ.
ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್, ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್, ಆರೋಗ್ಯ ಸಚಿವ ಡಾ.ಹರ್ಷವರ್ಧನ್, ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ಶ್ಯಾಮ್ ಜಾಜು, ಜೈರಾಮ್ ಠಾಕೂರ್, ವಿಜಯ್ ಗೋಯೆಲ್, ಮೀನಾಕ್ಷಿ ಲೇಖಿ ಪಟ್ಟಿಯಲ್ಲಿರುವ ಇತರ ಪ್ರಮುಖ ನಾಯಕರಾಗಿದ್ದಾರೆ.
ಆದರೆ, ಕೇಸರಿ ಪಕ್ಷ ಇನ್ನೂ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಿಸಿಲ್ಲ. ಬಿಜೆಪಿ ಎಲ್ಲಾ 70 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ದೆಹಲಿಯಲ್ಲಿ ಮತ ಎಣಿಕೆ ಫೆಬ್ರವರಿ 11 ರಂದು ನಡೆಯಲಿದೆ.
2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ.
2015 ರ ಚುನಾವಣೆಯಲ್ಲಿ ಎಎಪಿ 67 ಸ್ಥಾನಗಳನ್ನು ಗೆದ್ದರೆ, ಬಿಜೆಪಿಗೆ ಉಳಿದ ಮೂರು ಸ್ಥಾನಗಳನ್ನು ಗಳಿಸಿತ್ತು. ಆದರೆ ಕಾಂಗ್ರೆಸ್‌ಗೆ ಒಂದು ಸ್ಥಾನ ಕೂಡ ಪಡೆಯಲು ಸಾಧ್ಯವಾಗಿರಲಿಲ್ಲ.