ಬಳ್ಳಾರಿ,ಮೇ 08: ಇದೇ ಮೇ 21, 22 ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ರಾಜ್ಯದ ಮಟ್ಟದ ಪ್ರಗತಿ ಪರೀಶೀಲನಾ ಸಭೆ ನಡೆಯಲಿದ್ದು, ಇಲ್ಲಿಯವರೆಗೆ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಂದ ನಾನಾ ಯೋಜನೆಗಳಡಿ ಸಾಧಿಸಲಾದ ಪ್ರಗತಿಯ ಪೂರಕ ಮಾಹಿತಿಯನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮಾನ್ಯ ಮುಖ್ಯಮಂತ್ರಿಗಳು ಇದೇ ಮೇ 21 ಹಾಗೂ 22 ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕಾಧಿರಿಗಳೊಂದಿಗೆ ಸಭೆ ನಡೆಸಲಿದ್ದು, ಈ ಕುರಿತು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರಿ್ಡಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ಸರಬರಾಜಾಗುವ ಕುಡಿಯುವ ನೀರಿನ ನಿಯಮಿತ ಪರೀಕ್ಷೆ, ಕ್ಲೋರಿನೇಷನ್ ತಪಾಸಣೆ ಹಾಗೂ ಇತರೆ ಕೈಗೊಳ್ಳುವ ಕಾರ್ಯದ ಕುರಿತು ಸಂಪೂರ್ಣ ಮಾಹಿತಿ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಬಿತ್ತನೆ ಕ್ಷೇತ್ರ, ರಸಗೊಬ್ಬರ ವಿತರಣೆ ಮತ್ತು ಬಾಕಿ ಇರುವ ದಾಸ್ತಾನು, ಬೆಳೆ ವಿಮೆಗೆ ರೈತರ ನೋಂದಣಿ ಸೇರಿದಂತೆ ಎಲ್ಲಾ ಸಂಪೂರ್ಣ ಮಾಹಿತಿ ಒದಗಿಸಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ವಿವಿಧ ನಿಗಮಗಳ ಗಂಗಕಲ್ಯಾಣ ಯೋಜನೆಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ಆಯ್ಕೆಗೊಂಡ ಫಲಾನುಭವಿಗಳಿಗೆ ಯಾವುದೇ ಕಾರಣಕ್ಕೂ ವಿಳಂಬ ಆಗದ ರೀತಿಯಲ್ಲಿ ಯೋಜನೆ ತಲುಪಿಸಬೇಕು. ವಿದ್ಯುತ್ ಸರಬರಾಜು ಹಾಗೂ ಇತರೆ ಸಮಸ್ಯೆ ಇದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಸಮನ್ವಯತೆಯಿಂದ ಪರಿಹಾರವಾಗಬೇಕು ಎಂದು ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್ ಗಳ ಬಗ್ಗೆ ಹೆಚ್ಚಿನ ಕಾಳಜಿ ತೋರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ವಿವಿಧೆಡೆ ಬಾಕಿ ಇರುವ ಇಂದಿರಾ ಕ್ಯಾಂಟೀನ್ ಗಳ ನಿರ್ಮಾಣ ಕಾಮಗಾರಿಯನ್ನು ಸ್ಥಳೀಯ ಶಾಸಕರ ಸಹಕಾರದಲ್ಲಿ ಪೂರ್ಣಗೊಳಿಸಬೇಕು. ಎಲ್ಲಾ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿ ಸಿಸಿಟಿವಿ ಅಳವಡಿಕೆ ಮತ್ತು ನಿರ್ವಹಣೆ ಕುರಿತು ಸಂಪೂರ್ಣ ಮಾಹಿತಿ ನೀಡಬೇಕು ಎಂದು ಡಿಯುಡಿಸಿ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತು ಯುವನಿಧಿ ಯೋಜನೆಗಳ ಪ್ರಗತಿವಾರು ವರದಿ ಸಲ್ಲಿಸಬೇಕು. ಅರ್ಹ ಸಾರ್ವಜನಿಕರಿಗೆ ಯೋಜನೆಗಳು ತಲುಪಿಸುವಲ್ಲಿ ಆಗುವ ಸಮಸ್ಯೆ ಅಥವಾ ವಿಳಂಬ ಕುರಿತು ಪೂರಕ ಮಾಹಿತಿ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಬಿ-ಖಾತಾ ವಿತರಣೆಯಲ್ಲಿ ಪ್ರಗತಿ ಹೊಂದಬೇಕು, ಬಿ-ಖಾತಾ ಅಭಿಯಾನ ಹೆಚ್ಚಾಗಿ ಆಯೋಜಿಸಬೇಕು. ತೆರಿಗೆ ಸಂಗ್ರಹಣ ವಿವರ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೆ ನಡೆದ ಜನತಾ ದರ್ಶನ ಕಾರ್ಯಕ್ರಮಗಳಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಲ್ಲಿಕೆಯಾದ ಅಹವಾಲು ವಿಲೇವಾರಿ ಬಗ್ಗೆ ವಿಚಾರಿಸಿದ ಜಿಲ್ಲಾಧಿಕಾರಿಗಳು, ಬಾಕಿಯಿರುವ ಎಲ್ಲಾ ಅರ್ಜಿಗಳನ್ನು ನಿಯಾಮನುಸಾರವಾಗಿ ಇಲಾಖೆಗಳು ವಿಲೇವಾರಿ ಮಾಡಬೇಕು, ಕೇವಲ ಹಿಂಬರಹ ನೀಡುವಂತಹದ್ದಲ್ಲ, ಯಾವುದೇ ಅರ್ಜಿಗಳನ್ನು ತಮ್ಮಲ್ಲಿ ಇಟ್ಟುಕೊಳ್ಳಬಾರದು. ಬಾಕಿಯಿರುವ ಪ್ರಕರಣಗಳನ್ನು ವಿಲೇ ಮಾಡುವ ಕಾರ್ಯವಾಗಬೇಕು. ಈ ಕುರಿತು ಪೂರಕ ಮಾಹಿತಿ ನೀಡಬೇಕು ಎಂದು ಎಲ್ಲಾ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣಗಳ ವಿಲೇವಾರಿ ಮಾಹಿತಿ, ಎಸ್ಸಿ-ಎಸ್ಪಿ ಮತ್ತು ಟಿಎಸ್ಪಿ ಯೋಜನೆ ಅನುದಾನ ಬಳಕೆ, ಅರಣ್ಯ ಹಕ್ಕು ಕಾಯ್ದೆಯಡಿ ಬಾಕಿಯಿರುವ ಅರ್ಜಿಗಳ ಮಾಹಿತಿ ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಸರ್ಕಾರಿ ಕಾಲೇಜುಗಳ ಜಮೀನು, ವಸತಿ ನಿಲಯ, ಅಂಗನವಾಡಿ, ಸ್ಮಶಾನ ಭೂಮಿ ಖರೀದಿ ಯಾವುದೇ ಬಾಕಿ ಇದ್ದರೂ ಗಮನಕ್ಕೆ ತರಬೇಕು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಭಾಗಿಯಾಗುವುದರಿಂದ ತಮ್ಮ ಇಲಾಖೆಗಳಿಗೆ ಬೇಕಾದ ಪ್ರಸ್ತಾವನೆ, ಬೇಡಿಕೆಗಳಿದ್ದಲ್ಲಿ ಮಾಹಿತಿ ನೀಡಿ ಎಂದರು.
ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡ ಅವರು, ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ವಾರದೊಳಗಾಗಿ ಸಂಪೂರ್ಣ ಮಾಹಿತಿಯನ್ನು ಸೂಕ್ತ ನಮೂನೆಯಲ್ಲಿ ತಪ್ಪಿಲ್ಲದಂತೆ ಅಧಿಕಾರಿಗಳೇ ಖುದ್ದಾಗಿ ನಮೂದಿಸಬೇಕು. ಕಡ್ಡಾಯವಾಗಿ ಪ್ರಗತಿ ವರದಿಯನ್ನು ನಿಗದಿತ ಅವಧಿಯೊಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಕೃಷಿ ಜಂಟಿ ನಿರ್ದೇಶಕ ಸೋಮ್ ಸುಂದರ್, ಜಿಪಂ ಯೋಜನಾಧಿಕಾರಿ ವಿನೋದ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ರಾಘವೇಂದ್ರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.