ಬೆಂಗಳೂರು, ಫೆ.4 ,ಖಾಲಿ ಇರುವ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಅಭ್ಯರ್ಥಿಯಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಬೆಳಿಗ್ಗೆ 10.30ಕ್ಕೆ ಸವದಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ತಮ್ಮೊಂದಿಗೆ ಬರುವಂತೆ ಸವದಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.ವಿಧಾನ ಪರಿಷತ್ ಸದಸ್ಯರಾಗಿದ್ದ ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಸಭೆಗೆ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಪರಿಷತ್‌ನ ಉಪ ಚುನಾವಣೆ ಫೆಬ್ರವರಿ 17ರಂದು ನಡೆಯಲಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮಹೇಶ್ ಕುಮಟಳ್ಳಿ ವಿರುದ್ಧ ಸೋಲು ಕಂಡರೂ ಲಕ್ಷ್ಮಣ ಸವದಿ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದರು. ಈಗ ಕ್ಷೇತ್ರದ ರಾಜಕೀಯ ಬದಲಾಗಿದ್ದು, ಮಹೇಶ್ ಕುಮಟಳ್ಳಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿ ಅಥಣಿ ಉಪ ಚುನಾವಣೆಯಲ್ಲಿ ಕಣಕ್ಕಿಳಿದು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಫೆಬ್ರವರಿ 26ರೊಳಗೆ ಸವದಿ ವಿಧಾನಸಭೆ ಅಥವಾ ಪರಿಷತ್ ಸದಸ್ಯರಾಗುವುದು ಅನಿವಾರ್ಯವಾಗಿದೆ. ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತ ಇರುವುದರಿಂದ ಲಕ್ಷ್ಮಣ ಸವದಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯುವ ಸಾಧ್ಯತೆ ಇಲ್ಲ ಎನ್ನಲಾಗಿದೆ.