ಶಿವಮೊಗ್ಗ ಎಸ್‌.ಪಿ. ಕಚೇರಿ ಸೀಲ್‌ ಡೌನ್ ಮಾಡಿಲ್ಲ: ಜಿಲ್ಲಾಧಿಕಾರಿ

ಶಿವಮೊಗ್ಗ, ಮೇ 20, ಕೋವಿಡ್ ಪಾಸಿಟಿವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯನ್ನು ಸೀಲ್‌ ಡೌನ್ ಮಾಡಿಲ್ಲ ಎಂದು ಜಿಲ್ಲಾಧಿಕಾರಿ ಸಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಮೂರು ಮಂದಿ ಪೊಲೀಸ್ ಅಧಿಕಾರಿಗಳು ಕ್ವಾರೆಂಟೈನ್‌ನಲ್ಲಿದ್ದಾರೆ. ಇನ್ನುಳಿದಂತೆ ಯಾವುದೇ ಪೊಲೀಸ್ ಅಧಿಕಾರಿಗಳು ಕ್ವಾರೆಂಟೈನ್‌ನಲ್ಲಿ ಇಲ್ಲ. ಆದರೆ, ಮುಂಜಾಗರೂಕತಾ ಕ್ರಮವಾಗಿ ಈಗಾಗಲೇ 11 ಮಂದಿ ಪೊಲೀಸ್ ಅಧಿಕಾರಿಗಳ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದೆ. ವಿಶೇಷ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಕರ್ತವ್ಯಕ್ಕಾಗಿ ಬೇರೆ ಜಿಲ್ಲೆಯ ಅಧಿಕಾರಿಗಳನ್ನು ನಿಯೋಜಿಸುವುದು ಸಾಮಾನ್ಯವಾಗಿದ್ದು, ಆದರೂ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಹೊರ ಜಿಲ್ಲೆಯ ಅಧಿಕಾರಿಗಳು ಹೆಚ್ಚುವರಿ ಕರ್ತವ್ಯ ವಹಿಸಿಕೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಮುಂದಿನ ದಿನಗಳಲ್ಲಿ ಎರಡನೇ ಹಂತದ ಸಂಪರ್ಕ ಹೊಂದಿದ್ದವರ ತಪಾಸಣೆ ನಡೆಸಲಾಗುವುದು.  ಲಾಕ್‌ ಡೌನ್ ಸಡಿಲಿಕೆ ಮಾಡಿದ್ದರೂ, ಯಾರೂ ಅನಗತ್ಯವಾಗಿ ಮನೆಯಿಂದ ಹೊರ ಬರಬಾರದು. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಮಾಸ್ಕ್ ಧರಿಸಬೇಕು. ಜಿಲ್ಲೆಯ ಜನರು ಜಾಗರೂಕರಾಗಿದ್ದರೆ ಆತಂಕ ಪಡುವ ಅಗತ್ಯವಿಲ್ಲ ಎಂದರು.