ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸಲು ರಾಜ್ಯ ಸರ್ಕಾರ ಬದ್ಧ: ಯಡಿಯೂರಪ್ಪ

ವಿಜಯಪುರ, ಅ. 5:   ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ಹೇಳಿದ್ದಾರೆ. 

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣೆಕಟ್ಟಿನ ಸುತ್ತಮುತ್ತಲಿನ ಸುಮಾರು 20 ಗ್ರಾಮಗಳ ಜನರ ಸ್ಥಳಾಂತರಕ್ಕೆ ರಾಜ್ಯ ಸರ್ಕಾರ ಮುಂದಿನ ಬಜೆಟ್ನಲ್ಲಿ 20 ಸಾವಿರ ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದು ಭರವಸೆ ನೀಡಿದರು. 

ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಗಳು ಮತ್ತು ಪುನರ್ವಸತಿಗಾಗಿ ರಾಜ್ಯ ಸರ್ಕಾರ ಈಗಾಗಲೇ 2,500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಹಣವಿದೆ. ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಯಡಿಯೂರಪ್ಪ ಇದೇ ವೇಳೆ ತಿಳಿಸಿದರು.   

1,200 ಕೋಟಿ ರೂ.ಗಳ ಮಧ್ಯಂತರ ನೆರೆ ಪರಿಹಾರವನ್ನು ಬಿಡುಗಡೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯ ಸರ್ಕಾರ 34,000 ಕೋಟಿ ರೂ. ಪ್ರವಾಹ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಈಗ ತಾತ್ಕಾಲಿಕ ಪರಿಹಾರ ದೊರೆತಿದೆ. ಶೀಘ್ರದಲ್ಲೇ ಹೆಚ್ಚಿನ ಅನುದಾನ ಬಿಡುಗಡೆಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. 

ಔರಾದ್ಕರ್ ವರದಿ ಅನುಷ್ಠಾನವನ್ನು ಉಲ್ಲೇಖಿಸಿದ ಅವರು, ಒಂದೆರಡು ದಿನಗಳಲ್ಲಿ ಈ ಬಗ್ಗೆ ಚರ್ಚಿಸಿ ಅನುದಾನವನ್ನು ಖಾತರಿಪಡಿಸುತ್ತೇವೆ. ಪ್ರಸ್ತುತ, ಸರ್ಕಾರದ ಮುಂದೆ ಹೊಸ ಜಿಲ್ಲಾ ರಚನೆಯ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.